ಗೃಹ ವ್ಯವಹಾರಗಳ ಸಚಿವಾಲಯ

ಪರಿಹಾರ ಕೇಂದ್ರಗಳು, ಶಿಬಿರಗಳಲ್ಲಿರುವ ವಲಸೆ ಕಾರ್ಮಿಕರ ಕಲ್ಯಾಣ ಕುರಿತು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪಾಲಿಸುವಂತೆ ಕೇಂದ್ರ ಗೃಹ ಸಚಿವಾಲಯದಿಂದ ಎಲ್ಲಾ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ

Posted On: 12 APR 2020 5:03PM by PIB Bengaluru

ಪರಿಹಾರ ಕೇಂದ್ರಗಳು, ಶಿಬಿರಗಳಲ್ಲಿರುವ ವಲಸೆ ಕಾರ್ಮಿಕರ ಕಲ್ಯಾಣ ಕುರಿತು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪಾಲಿಸುವಂತೆ ಕೇಂದ್ರ ಗೃಹ ಸಚಿವಾಲಯದಿಂದ ಎಲ್ಲಾ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ

 

ಕೋವಿಡ್-19 ವಿರುದ್ಧ ಪರಿಣಾಮಕಾರಿ ಹೋರಾಟಕ್ಕೆ ಲಾಕ್ಡೌನ್ ಕ್ರಮಗಳನ್ನು ಜಾರಿಗೊಳಿಸುವಾಗ ದೇಶದ ವಿವಿಧ ಭಾಗಗಳಲ್ಲಿ ಪರಿಹಾರ ಕೇಂದ್ರ / ಶಿಬಿರಗಳಲ್ಲಿರುವ ವಲಸೆ ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.

ದೇಶಾದ್ಯಂತ ಪರಿಹಾರ ಕೇಂದ್ರಗಳಲ್ಲಿ ವಲಸೆ ಕಾರ್ಮಿಕರಿಗೆ ಆಹಾರ, ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯದ ಸರಿಯಾದ ವ್ಯವಸ್ಥೆಗಳ ಜೊತೆಗೆ ಸಾಕಷ್ಟು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. ಇದಲ್ಲದೆ, ಎಲ್ಲಾ ಧರ್ಮಗಳಿಗೆ ಸೇರಿದ ತರಬೇತಿ ಪಡೆದ ಸಲಹೆಗಾರರು ಅಥವಾ ಸಮುದಾಯಗಳ ಮುಖಂಡರು ಪರಿಹಾರ ಶಿಬಿರಗಳಿಗೆ ಭೇಟಿ ನೀಡಬೇಕು ಮತ್ತು ವಲಸಿಗರು ಎದುರಿಸಬಹುದಾದ ಯಾವುದೇ ಗೊಂದಲವನ್ನು ಪರಿಹರಿಸಬೇಕು ಎಂದು ಆದೇಶಿಸಿದೆ.

ವಲಸಿಗರ ಆತಂಕ ಮತ್ತು ಭೀತಿಯನ್ನು ಪೊಲೀಸರು ಮತ್ತು ಇತರ ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು ಮತ್ತು ಅವರು ವಲಸಿಗರೊಂದಿಗೆ ಮಾನವೀಯ ರೀತಿಯಲ್ಲಿ ವ್ಯವಹರಿಸಬೇಕು ಎಂದು ನ್ಯಾಯಾಲಯವು ತಿಳಿಸಿದೆ. ಇದಲ್ಲದೆ, ವಲಸಿಗರ ಕಲ್ಯಾಣ ಚಟುವಟಿಕೆಗಳ ಮೇಲ್ವಿಚಾರಣೆಗೆ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳು ಪೊಲೀಸರೊಂದಿಗೆ ಸ್ವಯಂಸೇವಕರನ್ನೂ ತೊಡಗಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ನಿರ್ದೇಶಿಸಿದೆ.

ಗೃಹ ಸಚಿವಾಲಯದ ಸಂವಹನವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಎಲ್ಲಾ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿರುವ ನಿರ್ದೇಶನಗಳನ್ನು ಪುನರುಚ್ಚರಿಸುತ್ತದೆ. ಆರೋಗ್ಯ ಸಚಿವಾಲಯವು ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ವಲಸಿಗ ಕಾರ್ಮಿಕರಲ್ಲಿನ ಮಾನಸಿಕ ಸಮಸ್ಯೆಗಳನ್ನು ಎದುರಿಸಲು ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿದೆ, ಮಾರ್ಗಸೂಚಿಗಳನ್ನು https://www.mohfw.gov.in/pdf/RevisedPsychosocialissuesofmigrantsCOVID19.pdf ವೆಬ್ ತಾಣದಲ್ಲಿ ನೋಡಬಹುದು.

***



(Release ID: 1613661) Visitor Counter : 238