ಗೃಹ ವ್ಯವಹಾರಗಳ ಸಚಿವಾಲಯ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಶ್ರೀ ಜಿ. ಕಿಶನ್ ರೆಡ್ಡಿ ಅವರು ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಮತ್ತು ಕಲ್ಲಿದ್ದಲು ಕಳ್ಳತನದ ಪರಿಸ್ಥಿತಿಯನ್ನು ಪರಿಶೀಲಿಸಿದರು
ಧನ್ ಬಾದ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಮತ್ತು ಕಳ್ಳತನದ ಪರಿಸ್ಥಿತಿ ಹದಗೆಡುತ್ತಿರುವ ಬಗ್ಗೆ ಗೃಹ ಸಚಿವರು ಕಳವಳ ವ್ಯಕ್ತಪಡಿಸಿದರು
ಕಲ್ಲಿದ್ದಲು ಸಚಿವಾಲಯ ಮತ್ತು ಸಿ ಐ ಎಸ್ ಎಫ್ ಇದುವರೆಗೆ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿದ ಶ್ರೀ ಅಮಿತ್ ಶಾ, ಅಕ್ರಮ ಗಣಿಗಾರಿಕೆಯ ಪಿಡುಗನ್ನು ಮಟ್ಟಹಾಕಲು ಇನ್ನೂ ಹೆಚ್ಚಿನ ಕೆಲಸ ಮಾಡುವ ಅಗತ್ಯವನ್ನು ಒತ್ತಿಹೇಳಿದರು
ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲಿನ ಅನಧಿಕೃತ ಸಾಗಣೆಗೆ ಸಮಗ್ರ ಮತ್ತು ಸಮಯಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳುವುದನ್ನು ʻಶೂನ್ಯ ಕಲ್ಲಿದ್ದಲು ಸೋರಿಕೆ ಯೋಜನೆʼಯನ್ನು ಅಳವಡಿಸಿಕೊಳ್ಳಲು ನಿರ್ಧಾರ
ಸಿಐಎಸ್ ಎಫ್ ನಿಯೋಜನೆಗಾಗಿ ಕಲ್ಲಿದ್ದಲು ವಲಯವನ್ನು ಆದ್ಯತೆಯ ಪಟ್ಟಿಯಲ್ಲಿ ಸೇರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನ
ಸೂಕ್ಷ್ಮ ಪ್ರದೇಶಗಳಲ್ಲಿ ಸಿಐಎಸ್ಎಫ್ ತ್ವರಿತ ಕಾರ್ಯಪಡೆಗಳನ್ನು ರಚಿಸಬೇಕು ಮತ್ತು ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಸ್ಥಾಪಿಸಬೇಕು
ತಂತ್ರಜ್ಞಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಗತ್ಯವನ್ನು ಗೃಹ ಸಚಿವರು ಒತ್ತಿಹೇಳಿದರು
ಅಕ್ರಮ ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಪ್ರದೇಶಗಳು ಮತ್ತು ವ್ಯಕ್ತಿಗಳನ್ನು ಗುರುತಿಸಲು ಸಂಯೋಜಿತ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳಲ್ಲಿ ಅಳವಡಿಸಲಾಗಿರುವ ಹೈ-ರೆಸಲ್ಯೂಶನ್ ಕ್ಯಾಮೆರಾಗಳನ್ನು ಬಳಸಬೇಕು
ಸಾರ್ವಜನಿಕ ಸಂಪನ್ಮೂಲಗಳನ್ನು ರಕ್ಷಿಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಕಾನೂನುಬದ್ಧ ಕಲ್ಲಿದ್ದಲು ಗಣಿಗಾರಿಕೆಯ ಹಿತಾಸಕ್ತಿಗಳನ್ನು ರಕ್ಷಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ
प्रविष्टि तिथि:
05 JUL 2026 7:31PM by PIB Bengaluru
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಮತ್ತು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಶ್ರೀ ಜಿ. ಕಿಶನ್ ರೆಡ್ಡಿ ಅವರು ನವದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಮತ್ತು ಕಲ್ಲಿದ್ದಲು ಕಳ್ಳತನದ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ, ಕೇಂದ್ರ ಕಲ್ಲಿದ್ದಲು ಕಾರ್ಯದರ್ಶಿ, ಕಲ್ಲಿದ್ದಲು ಸಚಿವಾಲಯ, ಸಿಐಎಸ್ ಎಫ್, ಕೋಲ್ ಇಂಡಿಯಾ ಲಿಮಿಟೆಡ್ ಮತ್ತು ಬಿಸಿಸಿ ಎಲ್ ನ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯಲ್ಲಿ, ಧನ್ ಬಾದ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಮತ್ತು ಕಳ್ಳತನದ ಪರಿಸ್ಥಿತಿ ಹದಗೆಡುತ್ತಿರುವ ಬಗ್ಗೆ ಗೃಹ ಸಚಿವರು ಕಳವಳ ವ್ಯಕ್ತಪಡಿಸಿದರು. 2025ರ ಅಕ್ಟೋಬರ್ ಮೊದಲ ವಾರದಲ್ಲಿ ನಡೆದ ಪರಿಶೀಲನೆಯ ನಂತರ ಹಲವಾರು ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕಲ್ಲಿದ್ದಲು ಸಚಿವಾಲಯದ ಅಧಿಕಾರಿಗಳು ಗೃಹ ಸಚಿವರಿಗೆ ಮಾಹಿತಿ ನೀಡಿದರು. ಸಿಐಎಸ್ ಎಫ್ ಮತ್ತು ಕೋಲ್ ಇಂಡಿಯಾ ಲಿಮಿಟೆಡ್ ಅಧಿಕಾರಿಗಳಿಗೆ ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ, 1957ರ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಮಾಹಿತಿ ನೀಡಲಾಯಿತು. ಈ ಅಧಿಕಾರವು ನ್ಯಾಯಾಲಯದಲ್ಲಿ ಪ್ರಕರಣಗಳನ್ನು ದಾಖಲಿಸಲು, ಅಕ್ರಮ ಕಲ್ಲಿದ್ದಲನ್ನು ಸಂಗ್ರಹಿಸಿಡಲಾಗಿದೆ ಎಂದು ಶಂಕಿಸಲಾದ ಸ್ಥಳಗಳನ್ನು ಪ್ರವೇಶಿಸಲು, ಶೋಧನೆ ಹಾಗು ವಶಪಡಿಸಿಕೊಳ್ಳುವ ಕಾರ್ಯಾಚರಣೆಗಳನ್ನು ನಡೆಸಲು ಮತ್ತು ಅಕ್ರಮವಾಗಿ ಹೊರತೆಗೆಯಲಾದ ಖನಿಜಗಳೊಂದಿಗೆ ಅಂತಹ ಅನಧಿಕೃತ ಚಟುವಟಿಕೆಗಳಲ್ಲಿ ಬಳಸಲಾದ ಉಪಕರಣಗಳು, ಸಲಕರಣೆಗಳು ಮತ್ತು ವಾಹನಗಳನ್ನು ಜಪ್ತಿ ಮಾಡಲು ಅವರಿಗೆ ಕಾನೂನುಬದ್ಧವಾಗಿ ಅನುವು ಮಾಡಿಕೊಡುತ್ತದೆ. 2025ರ ಡಿಸೆಂಬರ್ ನಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಗಳು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಅದರಲ್ಲಿ ಕಲ್ಲಿದ್ದಲು ವಲಯ ಸಮನ್ವಯ ಸಮಿತಿಯನ್ನು ರಚಿಸುವ ನಿರ್ದೇಶನ ಸೇರಿದಂತೆ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿತ್ತು ಮತ್ತು ಅದರಂತೆ ಸಮಿತಿಯನ್ನು ರಚಿಸಲಾಗಿದೆ ಎಂದು ಸಹ ತಿಳಿಸಲಾಯಿತು.
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಕಲ್ಲಿದ್ದಲು ಸಚಿವಾಲಯ ಮತ್ತು ಸಿ ಐ ಎಸ್ ಎಫ್ ಇದುವರೆಗೆ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿದರು. ಆದಾಗ್ಯೂ, ಅಕ್ರಮ ಗಣಿಗಾರಿಕೆಯ ಪಿಡುಗನ್ನು ಮಟ್ಟಹಾಕಲು ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಬೇಕಾಗಿದೆ ಎಂದು ಅವರು ಒತ್ತಿಹೇಳಿದರು. ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲಿನ ಅನಧಿಕೃತ ಸಾಗಣೆಗೆ ಸಮಗ್ರ ಮತ್ತು ಕಾಲಮಿತಿಯ ಪ್ರತಿಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ʻಶೂನ್ಯ ಕಲ್ಲಿದ್ದಲು ಸೋರಿಕೆ ಯೋಜನೆʼಯನ್ನು ಅಳವಡಿಸಿಕೊಳ್ಳುವುದು ಸೇರಿದಂತೆ ಗೃಹ ಸಚಿವರು ಹಲವಾರು ಪ್ರಮುಖ ನಿರ್ದೇಶನಗಳನ್ನು ನೀಡಿದರು. ಎಂ ಎಂ ಡಿ ಆರ್ ಕಾಯ್ದೆಯಡಿ ಸಿ ಐ ಎಸ್ ಎಫ್ ಮತ್ತು ಕೋಲ್ ಇಂಡಿಯಾ ಲಿಮಿಟೆಡ್ ಅಧಿಕಾರಿಗಳಿಗೆ ಅಧಿಕಾರವನ್ನು ವಹಿಸಿಕೊಡಲಾಗಿದ್ದರೂ, ಅನುಮೋದಿತ ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಕ್ಕೆ ಅನುಗುಣವಾಗಿ ಈ ಅಧಿಕಾರಗಳನ್ನು ಕಟ್ಟುನಿಟ್ಟಾಗಿ ಮತ್ತು ಸಂಯೋಜಿತ ರೀತಿಯಲ್ಲಿ ಚಲಾಯಿಸಬೇಕು ಎಂದು ಅವರು ಹೇಳಿದರು.
ಕೈಗೊಂಡ ಕ್ರಮಗಳನ್ನು ನಿಯಮಿತವಾಗಿ ಪರಿಶೀಲಿಸುವಂತೆ ಶ್ರೀ ಅಮಿತ್ ಶಾ ಅವರು ಕಲ್ಲಿದ್ದಲು ಸಚಿವಾಲಯಕ್ಕೆ ಸೂಚಿಸಿದರು. ಗ್ರಾಹಕರು ಕಾನೂನುಬದ್ಧವಾಗಿ ಗಣಿಗಾರಿಕೆ ಮಾಡಿದ ಕಲ್ಲಿದ್ದಲನ್ನು ಮಾತ್ರ ಬಳಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಅಕ್ರಮ ಕಲ್ಲಿದ್ದಲಿನ ಸಾಗಣೆಯನ್ನು ತಡೆಯಲು, ಜಿ ಎಸ್ ಟಿ ಅಧಿಕಾರಿಗಳನ್ನು ಒಳಗೊಳ್ಳುವುದು ಅಗತ್ಯವೆಂದು ಪರಿಗಣಿಸಲಾಯಿತು. ಆದ್ದರಿಂದ, ಸಾಗಣೆಯಾಗುವ ಎಲ್ಲಾ ಕಲ್ಲಿದ್ದಲಿನ ಇ-ವೇ ಬಿಲ್ ಗಳನ್ನು ಪರಿಶೀಲಿಸಲು ಒಂದು ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಸೂಚಿಸಿದರು.
ಸೂಕ್ಷ್ಮ ಪ್ರದೇಶಗಳಲ್ಲಿ ಸಿಬ್ಬಂದಿಯನ್ನು ತಕ್ಷಣವೇ ನಿಯೋಜಿಸಲು ಅನುಕೂಲವಾಗುವಂತೆ, ಸಿಐಎಸ್ಎಫ್ ನಿಯೋಜನೆಗಾಗಿ ಕಲ್ಲಿದ್ದಲು ವಲಯವನ್ನು ಆದ್ಯತೆಯ ಪಟ್ಟಿಯಲ್ಲಿ ಸೇರಿಸಲು ಗೃಹ ಸಚಿವಾಲಯದ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರು ನಿರ್ದೇಶನ ನೀಡಿದರು. ಸೂಕ್ಷ್ಮ ಪ್ರದೇಶಗಳಲ್ಲಿ ತ್ವರಿತ ಕಾರ್ಯಪಡೆಗಳನ್ನು ರಚಿಸಲು ಮತ್ತು ಬಹುಹಂತದ ಭದ್ರತಾ ವ್ಯವಸ್ಥೆಯನ್ನು ಸ್ಥಾಪಿಸಲು ಅವರು ಸಿಐಎಸ್ ಎಫ್ ಗೆ ನಿರ್ದೇಶನ ನೀಡಿದರು, ಇದರಿಂದಾಗಿ ಮಾಹಿತಿ ದೊರೆತ ಕೂಡಲೇ ಅಕ್ರಮ ಗಣಿಗಾರರ ವಿರುದ್ಧ ತಕ್ಷಣದ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ.
ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ತಂತ್ರಜ್ಞಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಗತ್ಯವನ್ನು ಒತ್ತಿಹೇಳಿದರು. ಅಕ್ರಮ ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಪ್ರದೇಶಗಳು ಮತ್ತು ವ್ಯಕ್ತಿಗಳನ್ನು ಗುರುತಿಸಲು ಸಂಯೋಜಿತ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳಲ್ಲಿ ಅಳವಡಿಸಲಾಗಿರುವ ಹೈ-ರೆಸಲ್ಯೂಶನ್ ಕ್ಯಾಮೆರಾಗಳನ್ನು ಬಳಸಬೇಕು ಎಂದು ಅವರು ನಿರ್ದೇಶಿಸಿದರು. ಸಾರ್ವಜನಿಕ ಸಂಪನ್ಮೂಲಗಳನ್ನು ರಕ್ಷಿಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಕಾನೂನುಬದ್ಧ ಕಲ್ಲಿದ್ದಲು ಗಣಿಗಾರಿಕೆಗಳ ಹಿತಾಸಕ್ತಿಗಳನ್ನು ರಕ್ಷಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವರು ಹೇಳಿದರು.
*****
(रिलीज़ आईडी: 2281495)
आगंतुक पटल : 11